ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ) : ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಬೆಂಗಳೂರ ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯತೀಶ್.ಆರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕರೆಯಲಾಗಿದ್ದ ಜಲ ಜೀವನ ಮಿಷನ್ ಯೋಜನೆ ಕಾಮಗಾರಿಗಳ ಸಮಗ್ರ ಅನುಷ್ಠಾನಕ್ಕಾಗಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಕಾಲಕಾಲಕ್ಕೆ ಸ್ಥಳ ಪರಿಶೀಲನೆ ಮಾಡಬೇಕು. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವು ಸದ್ಬಳಕೆ ಮಾಡಿಕೊಳ್ಳಬೇಕು. ಕೆಲಸ ಸರಿಯಾಗಿ ನಿರ್ವಹಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು ಒಂದು ವೇಳೆ ಅವರು ಸರಿಯಾಗಿ ಕೆಲಸ ನಿರ್ವಹಿಸದೆಯಿದ್ದರೆ ಅವರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ತಿಳಿಸಿದರು.
ಜಿಲ್ಲೆಯ 5 ತಾಲೂಕಿಗೆ 2025-26ನೇ ಸಾಲಿನಲ್ಲಿ ಬರ ಪರಿಹಾರ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ರೂ. 2 ಕೋಟಿಗಳ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು ಒಟ್ಟು 54 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಪ್ರಸ್ತುತ ರೂ. 1 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದರು.
ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಜಲ ಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಯಾವ-ಯಾವ ಶಾಲೆಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಅವನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಆರೋಗ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಬೇಕು. ಅಂಗನವಾಡಿಗಳಲ್ಲಿ ಬಳಸಲಾಗುವ ನೀರನ್ನು ಸರಿಯಾಗಿದೆಯೇ ಇಲ್ಲವೇ ಎಂಬುವುದನ್ನು ಆರೋಗ್ಯ ಇಲಾಖೆಯಿಂದ ಪರೀಕ್ಷೆ ನಡೆಸಬೇಕು. ಮುಖ್ಯವಾಗಿ ಕುಡಿಯುವ ನೀರು ಹಾಗೂ ಆಡುಗೆಗೆ ಬಳಸುವ ನೀರನ್ನು ಸರಿಯಾಗಿ ಪರೀಕ್ಷಿಸಬೇಕೆಂದು ಎಂದು ಹೇಳಿದರು.
ಆನೇಕಲ್ ತಾಲ್ಲೂಕಿನ (ಜಿಗಣಿ) ಬನ್ನೇರುಘಟ್ಟ ಗ್ರಾಮ ಪಂಚಾಯಿತಿಯಡಿ ಬರುವ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದ್ದು ಕೂಡಲೇ ಗ್ರಾಮದಲ್ಲಿ ಹೊಸ ಬೋರ್ ವೆಲ್ ಕೊರೆಯುವ ಕಾಮಗಾರಿಯನ್ನು ಶ್ರೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ನೊಮೆಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಪುರುಷೋತ್ತಮ. ಎನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರನಾಥ್ ಮೇಟಿ, ತಾಲ್ಲೂಕು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.