ರಾಜ್ಯದಲ್ಲಿ ಒಟ್ಟು 22 ಸರ್ಕಾರಿ ವೈದ್ಯಕೀಯ ವಿಜ್ಞಾನ ಕಾಲೇಜುಗಳಿವೆ. ಸದರಿ ಕಾಲೇಜುಗಳಿಗೆ ಒಟ್ಟು 21860 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 9413 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಹಾಗೂ ಒಟ್ಟು 12447 ಹುದ್ದೆಗಳು ಖಾಲಿ ಇವೆ. ಸರ್ಕಾರಿ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಿಗೆ ಒಟ್ಟು 5584 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 2028 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಹಾಗೂ ಒಟ್ಟು 3556 ಹುದ್ದೆಗಳು ಖಾಲಿ ಇವೆ. ಒಳ ಮೀಸಲಾತಿ ನಿರ್ಣಯ ಆದೇಶವಾದ ಕೂಡಲೇ ಹಂತ ಹಂತವಾಗಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಆರ್ ಪಾಟೀಲ್ ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೈದ್ಯಕೀಯ ಕಾಲೇಜುಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿಮಾಡಲು ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿರುವುದರಿಂದ ಯಾವುದೇ ಹುದ್ದೆಗಳನ್ನು ಭರ್ತಿಮಾಡಲು ಸಾಧ್ಯವಾಗಿರುವುದಿಲ್ಲ.
ಪ್ರಸ್ತುತ ಖಾಲಿ ಇರುವ ಹುದ್ದೆಗಳನ್ನು ಅಗತ್ಯತೆಗೆ ತಕ್ಕಂತೆ ಗುತ್ತಿಗೆ ಆಧಾರದ ಮೇಲೆ ಹಾಗೂ ಗ್ರೂಪ್ ‘ಡಿ’ ನೌಕರರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಮುಂದುವರೆದು, ಸರ್ಕಾರಿ ಕಾಲೇಜುಗಳಿಗೆ ಹೊಂದಿಕೊಂಡ ಜಿಲ್ಲಾಸ್ಪತೆಯ ಹುದ್ದೆಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹುದ್ದೆಗಳಾಗಿದ್ದು, ಸದರಿ ಹುದ್ದೆಗಳನ್ನು ನಿಯೋಜನೆ ಮೂಲಕ ತುಂಬಲು ಕೋರಲಾಗಿರುತ್ತದೆ.